ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಮಕ್ಕಳ ಆರೋಗ್ಯ ಕಾಳಜಿ, ಸಮರ್ಪಕ ತ್ಯಾಜ್ಯ ನಿರ್ವಹಣೆ, ಗ್ರಾಮ, ನಗರಗಳ ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ, ಕೆರೆಗಳ ಸಂರಕ್ಷಣೆ, ಸಾರ್ವಜನಿಕರ ಆರೋಗ್ಯ, ಶಾಲಾ ಮಕ್ಕಳ ಶಿಕ್ಷಣ ಗುಣಮಟ್ಟ ಸುಧಾರಣೆ, ಕೊಠಡಿಗಳ ಸುಸ್ಥಿತಿ, ಸಾರ್ವಜನಿಕ ಆಸ್ತಿ ರಕ್ಷಣೆ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ, ಹಸರೀಕರಣದ ದೃಷ್ಟಿಯಲ್ಲಿ ಅರಣ್ಯೀಕರಣ ಒಳಗೊಂಡಂತೆ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು, ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ (karnataka lokayukta justice) ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿರುವ ಚಿಕ್ಕ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರದ ಕಟ್ಟಡಗಳ ಕಿಟಕಿಗಳಿಗೆ ಜಾಳಿಗೆ ಅಳವಡಿಸಿ ಸೊಳ್ಳೆಗಳು ಬರದಂತೆ ನೋಡಿಕೊಂಡು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಮೊದಲಾದ್ಯತೆ ನೀಡಬೇಕು. ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಕಾಲಮಿತಿ ಹಾಕಿಕೊಂಡು ಪ್ರಗತಿ ಸಾಧಿಸಬೇಕು. ನಗರ ಪ್ರದೇಶಗಳಲ್ಲಿ ತ್ಯಾಜ್ಯಗಳನ್ನು ವಿಂಗಡಿಸಿ ಸಮರ್ಪಕವಾಗಿ ವಿಲೇವಾರಿಗೆ ಕ್ರಮ ವಹಿಸಬೇಕು.
ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸುರಕ್ಷತೆ ಕಲ್ಪಿಸುವ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ ಮಾಹಿತಿ ಸಂಗ್ರಹಿಸಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮಂಜಾಗೃತೆ ವಹಿಸಲು ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಪೋಲಿಸ್ ಇಲಾಖೆ, ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಸಮನ್ವಯದಲ್ಲಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸಿ ದುಶ್ಚಟಗಳ ನಿವಾರಣೆಗೆ ಶ್ರಮಿಸಬೇಕು ಎಂದರು.
ಜಿಲ್ಲಾಧಿಕಾರಿ ಟಿ,ಭೂಬಾಲನ್ ಅವರು ಮಾತನಾಡಿ, ಜಿಲ್ಲೆಯಲ್ಲಿನ 264 ಕೆರೆಗಳ ಪೈಕಿ 247 ಕೆರೆಗಳ ಅಳತೆ ಕಾರ್ಯ ಪೂರ್ಣಗೊಳಿಸಲಾಗಿದೆ. 17 ಕೆರೆಗಳ ಬಾಕಿ ಇದ್ದು, ಸೆಪ್ಟಂಬರ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು. ಜಿಲ್ಲೆಯಲ್ಲಿನ ವಿಫಲ ಕೊಳವೆಬಾವಿಗಳ ಕುರಿತು ಈಗಾಗಲೇ ಪ್ರತಿ ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಶನಿವಾರ ಸ್ವಚ್ಛತಾ ಅಭಿಯಾನ ಕೈಗೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಗುಣಮಟ್ಟದ ಶಿಕ್ಷಣ ಹಾಗೂ ಶಾಲಾ ಕೊಠಡಿಗಳ ಸುಸ್ಥಿತಿ ಕುರಿತು ಕಾಲಕಾಲಕ್ಕೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಲಾಗಿದೆ ಎಂದರು. ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ಕಾರ್ಯದರ್ಶಿಗಳಾದ ಕೆ.ಶ್ರೀನಾಥ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.