ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಾಗಮಂಗಲ ಕೋಮುಗಲಭೆ(Nagamangala Case) ತನಿಖೆಯನ್ನು ಎನ್ಐಎಗೆ ವಹಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಯಲ್ಲಿ ಪಿಎಫ್ಐ, ಕೆಎಫ್ ಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ಬರೆದಿದ್ದಾರೆ.
ಈ ದುರುಳರು ಗಲಭೆಗೂ ಮುನ್ನ 150 ಮಾಸ್ಕ್(Mask) ಖರೀದಿಸಿದ್ದಾರೆ. ಸಿಸಿಟಿವಿಗಳನ್ನು(CCTV) ನಾಶ ಮಾಡಿದ್ದಾರೆ. ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿತವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ. ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ ಎಫ್ಐಆರ್ ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೊಲೀಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ. ಈ ಪ್ರಕರಣವನ್ನು ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನು ಎನ್ಐಎಗೆ(NIA) ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ ಅವರನ್ನು ಒತ್ತಾಯಿಸುತ್ತೇನೆ ಎಂದು ಬರೆದಿದ್ದಾರೆ.