ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜಭವನ ದುರ್ಬಳಕೆ ಮಾಡಿಕೊಂಡು, ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡಿರುವ ಕೇಂದ್ರದ ಬಿಜೆಪಿ ವಿರುದ್ಧ ಕೈ ನಾಯಕರು ವಾಗ್ದಾಳಿ ನಡೆಸಿದ್ದರು. ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ್ ರೆಡ್ಡಿ ವಿರುದ್ಧದ ಪ್ರಕರಣಗಳ ತನಿಖೆಗೆ ಪ್ರಾಸಿಕ್ಯೂಷನ್ ಕೊಡಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್(Congress) ಶನಿವಾರ ಮನವಿ ಸಲ್ಲಿಸಿತು.
ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಯಿಂದ ಪ್ರತಿಭಟನೆ ನಡೆಸಿ ರಾಜಭವನದ(Rajabhavan chalo) ತನಕ ಕಾಲ್ನಡಿಗೆ ಮೂಲಕ ಆಗಮಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಯಾರೋ ದೂರು ನೀಡಿದರೆಂದು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಆದರೆ, ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳ ತನಿಖೆಗೆ ಅನುಮತಿ ನೀಡುತ್ತಿಲ್ಲ. ರಾಜಭವನ ರಾಜಕೀಯ ಭವನ ಆಗಬಾರದು ಎಂದು ಕಿಡಿ ಕಾರಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಸಚಿವ ಸಂಪುಟ ಸಹದ್ಯೋಗಿಗಳು, ಶಾಸಕರು, ಪರಿಷತ್ ಸದಸ್ಯರು, ಸಂಸದರು, ನಾಯಕರು ಸೇರಿದಂತೆ ಅನೇಕರು ಭಾಗವಹಿಸಿದ್ದರು. ದಾರಿಯುದ್ದಕ್ಕೂ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಧಿಕ್ಕಾರ ಕೂಗಿದರು. ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.