ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಪಟ್ಟಣದ ತಹಶೀಲ್ದಾರ್ ಕಚೇರಿ ಹತ್ತಿರ ಇರುವ ಬನ್ನಿ ಲಕ್ಷ್ಮಿ ಗುಡಿಯ ಬಳಿ ಬುಲೆರೊ ವಾಹನ ಹಾಗೂ ಸ್ಕೂಟಿ ನಡುವೆ ಶುಕ್ರವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಪಘಾತದಲ್ಲಿ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಬುಲೆರೊ ವಾಹನದ ಚಾಲಕನ ಬದಿಯ ಬಾಗಿಲಿಗೆ ಹಾನಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಬಸವೇಶ್ವರ ವೃತ್ತದಿಂದ ವಿವೇಕಾನಂದ ವೃತ್ತದ ಕಡೆ ಹೊರಟಿದ್ದ ಬುಲೆರೊ ವಾಹನ ಯೂಟರ್ನ್ ತೆಗೆದುಕೊಳ್ಳುತ್ತಿದ್ದಾಗ ಹಿಂದಿನಿಂದ ಬರುತ್ತಿದ್ದ ಸ್ಕೂಟಿ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದರು. ಅದೃಷ್ಟವಶಾತ್ ಯಾವುದೇ ಅನಾಹುತವಾಗಿಲ್ಲ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.