ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಹಾಗೂ ಸಾಮಾನ್ಯ ಯೋಜನೆಯಡಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವವನ್ನು ಏಪ್ರಿಲ್ ಕೊನೆಯ ವಾರದಲ್ಲಿ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲು ಉದ್ಧೇಶಿಸಿದ್ದು, ಕಾರ್ಯಕ್ರಮದ ಅಗತ್ಯ ರೂಪುರೇಷೆ-ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಪೂರ್ವಭಾವಿ ಸಭೆಯಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಮಹಿಳಾ ಸಂಘ-ಸಂಸ್ಥೆಗಳು ಪಾಲ್ಗೊಳ್ಳುವ ಕುರಿತು ಅಗತ್ಯ ರೂಪುರೇಷೆ ಸಿದ್ಧಪಡಿಸುವಂತೆಯೂ, ಕಾರ್ಯಕ್ರಮ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ವಹಿಸಿಕೊಂಡು ಕಾರ್ಯಕ್ರಮ ಆಯೋಜನೆಗೆ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಕಲಾವಿದರು ಹಾಗೂ ಸ್ಥಳೀಯ ಮಹಿಳಾ ಕಲಾವಿದರನ್ನೊಳಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಮಹಿಳಾ ಕವಿಗೋಷ್ಠಿ, ವಿಚಾರ ಗೋಷ್ಠಿ, ಕಾವ್ಯ ಕುಂಚ ಗಾಯನ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ವಿಶೇಷ ಉಪನ್ಯಾಸ, ಮಹಿಳಾ ಉತ್ಪನ್ನಗಳ ಪ್ರದರ್ಶನ ಮೇಳ, ಖಾದಿ, ಕಸೂತಿ, ಕರಕುಶಲ ವಸ್ತುಗಳು ಮತ್ತು ಮಹಿಳೆಯರು ಸಿದ್ಧಪಡಿಸಿರುವ ಸ್ಥಳೀಯ ಹಾಗೂ ದೇಸಿ ತಿಂಡಿ-ತಿನಿಸು, ಉಡುಗೆ-ತೊಡುಗೆ ಹಾಗೂ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಸ್ಥಾಪನೆ, ವಿದ್ಯಾರ್ಥಿನಿಯರಿಂದ ರಸಪ್ರಶ್ನೆ, ಭಾಷಣ, ಆಶು ಭಾಷಣ, ಪ್ರಬಂಧ, ರಂಗೋಲಿ, ಚಿತ್ರಕಲಾ ಶಿಬಿರ ಸ್ಪರ್ಧೆ ಸೇರಿದಂತೆ ಮಹಿಳಾ ಜಾನಪದ ಜಾತ್ರೆ, ನಾಟಕೋತ್ಸವ ಹಾಗೂ ಮಹಿಳಾ ಕ್ರೀಡಾಕೂಟಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸುವ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಮಹಿಳಾ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪ್ರೊ.ವಿಜಯಾ ಕೋರಿಶೆಟ್ಟಿ, ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಶಂಕರಗೌಡ ಸೋಮನಾಳ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ರಾಹುಲ್ ಬಾವಿದೊಡ್ಡಿ, ಮಹಿಳಾ ವಿಶ್ವವಿದ್ಯಾಲಯದ ಪ್ರೊ.ಓಂಕಾರ ಕಾಕಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿರಿದ್ದರು.




