ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಫೆಬ್ರವರಿ 10, 2025 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದೆ. ಈ ಮುಷ್ಕರದಿಂದಾಗಿ ಕಂದಾಯ ಇಲಾಖೆಯ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಸಂಘವು ತಿಳಿಸಿದೆ. ಇದರ ಭಾಗವಾಗಿ ರಾಜ್ಯ ಸಂಘದ ನಿರ್ದೇಶನದಂತೆ 2ನೇ ಹಂತದ ಮುಷ್ಕರಕ್ಕೆ ಸಿಂದಗಿ ತಾಲೂಕು ಗ್ರಾಮ ಆಡಳಿತ ಅಧಿಕಾರಿ ಸಂಘದ ವತಿಯಿಂದ ಗುರುವಾರ, ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಗ್ರಾಮ ಆಡಳಿತ ಅಧಿಕಾರಿಗಳ ಪ್ರಮುಖ ಬೇಡಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವುದು ಸೇರಿವೆ. ಈ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಘವು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದೆ. ಆದರೆ ಸರ್ಕಾರವು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಂಘವು ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರದಿಂದಾಗಿ ಕಂದಾಯ ಇಲಾಖೆಯ ಗ್ರಾಮ ಮಟ್ಟದ ಸೇವೆಗಳಾದ ಪಹಣಿ ವಿತರಣೆ, ಜನನ ಮರಣ ಪ್ರಮಾಣ ಪತ್ರ ವಿತರಣೆ, ಇತರೆ ದಾಖಲೆಗಳ ವಿತರಣೆ ಮತ್ತು ಕಂದಾಯಕ್ಕೆ ಸಂಬಂಧಿಸಿದ ಇತರ ಕಾರ್ಯಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಸಂಘವು ತಿಳಿಸಿದೆ.