ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆಯಾಗುತ್ತೆ ಎನ್ನುವ ವಿಚಾರದ ಜೊತೆಗೆ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನವನ್ನು ಮತ್ತೊಬ್ಬರಿಗೆ ನೀಡಬೇಕು ಎನ್ನುವ ಮಾತುಗಳು ಕೇಳಿ ಬಂದಿವೆ. ಇದಕ್ಕೆ ರಾಜ್ಯ ಉಸ್ತುವಾರಿ ಆಗಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾಗಲ್ಲ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗುವುದಾದರೆ ಅವರು ಯಾಕೆ ಆ ಸ್ಥಾನಕ್ಕೆ ಬರುತ್ತಿದ್ದರು. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು. ಬೆಳಗಾವಿಯಲ್ಲಿ ಮುಂದೂಡಿದ್ದ ಗಾಂಧಿ ಭಾರತ ಕಾರ್ಯಕ್ರಮ ಜನವರಿ 21ರಂದು ನಡೆಯುತ್ತಿದ್ದು, ಅದರ ಪರಿಶೀಲನೆಗೆ ಇಲ್ಲಿಗೆ ಬಂದಿದ್ದಾರೆ. ಬಿಜೆಪಿಯಲ್ಲಿ ಅಧ್ಯಕ್ಷರ ಬದಲಾವಣೆಗೆ ಯತ್ನಾಳ್, ರಮೇಶ್ ಜಾರಕಿಹೊಳಿ ಬಣ ಸಿದ್ಧವಾಗಿದೆ. ಕಾಂಗ್ರೆಸ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮುಂದಾಳತ್ವದಲ್ಲಿ ಇಲ್ಲಿಯೂ ಬಣ ಸಿದ್ಧವಾಗಿದೆ. ಈ ಕುರಿತು ಹೈಕಮಾಂಡ್ ಗಮನಕ್ಕೆ ತಂದಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಸಿಎಂ ರೇಸಿನಲ್ಲಿ ನಾನು ಇದ್ದೇನೆ ಎನ್ನುತ್ತಿರುವ ಸತೀಶ್ ಜಾರಕಿಹೊಳಿ ಈಗಿನಿಂದಲೇ ಒಂದೊಂದೆ ದಾಳಗಳನ್ನು ಉರುಳಿಸುತ್ತಿರುವುದು ಮಾತ್ರ ಸತ್ಯ.