ಪ್ರಜಾಸ್ತ್ರ ಸುದ್ದಿ
ನವ ದೆಹಲಿ(New Delhi): ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಹತ್ತಿರ ಸಂಭವಿಸಿದ ಸ್ಫೋಟ ಪ್ರಕರಣ ಸಂಬಂಧ ಕಾನೂನು ಬಾಹಿರ ಚಟುವಟಿಕೆ ಕಾಯ್ದೆ ಹಾಗೂ ಸ್ಫೋಟಕ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ, ಸ್ಫೋಟಕ ಕಾಯ್ದೆ ಹಾಗೂ ಯುಎಪಿಎ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ದೆಹಲಿಯ ಹಲವು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಹಲವು ಕಡೆ ಭದ್ರತೆ ಒದಗಿಸಲಾಗಿದೆ. ಹಲವು ಕಡೆ ಪೊಲೀಸರು ದಾಳಿ ನಡೆಸಿ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನೋದರ ತನಿಖೆ ಚುರುಕುಗೊಳಿಸಿದ್ದಾರೆ.
ದೆಹಲಿಯ ಕೆಂಪು ಕೋಟೆಯ ಹತ್ತಿರದ ಕಿಲ್ಲಾ ಮೆಟ್ರೋ ನಿಲ್ದಾಣದ ಗೇಟ್ ನಂಬರ್ 1ರಲ್ಲಿ ನಿಲ್ಲಿಸಿದ್ದ ಹಲವು ಕಾರುಗಳು ಸೋಮವಾರ ಸಂಜೆ ಸ್ಫೋಟಗೊಂಡಿವೆ. 9 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಈ ಘಟನೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಅದಲ್ಲದೆ ವಿಶ್ವಮಟ್ಟದಲ್ಲಿಯೂ ಚರ್ಚೆಗೆ ಕಾರಣವಾಗಿದೆ.




