ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಭೂಸ್ವಾಧೀನ ಪಡಿಸಿಕೊಂಡ ಭೂಮಿಗೆ ಹಲವು ವರ್ಷಗಳಿಂದ ಸರ್ಕಾರ ಪರಿಹಾರ ನೀಡದೆ ಇರುವುದರಿಂದ ರೈತನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂದಿನ ಕಾವೇರಿ ಉದ್ಯಾನದಲ್ಲಿ ರೈತ ಮಂಜೇಗೌಡ ಎಂ.ಡಿ(55) ಎಂಬುವರು ಮಂಗಳವಾರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಬುಧವಾರ ಮುಂಜಾನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಭೂಸ್ವಾಧೀನ ಪಡಿಸಿಕೊಂಡು ಹಲವು ವರ್ಷಗಳಿಂದ ಪರಿಹಾರ ನೀಡಿಲ್ಲ. ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರೂ ಸ್ಪಂದನೆ ನೀಡುತ್ತಿಲ್ಲವೆಂದು ಹೇಳಿ ಬೆಂಕಿ ಹಚ್ಚಿಕೊಂಡಿದ್ದರು. ಸಾರ್ವಜನಿಕರು ಬೆಂಕಿ ನಂದಿಸಿ ಮಂಡ್ಯ ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶೇಕಡ 80ರಷ್ಟು ದೇಹ ಸುಟ್ಟು ಹೋಗಿದ್ದರಿಂದ ಚಿಕಿತ್ಸೆ ಫಲಿಸದೆ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಖಂಡಿಸಿ ಮಂಗಳವಾರ ಸಂಜೆ ರೈತಪರ, ಕನ್ನಡಪರ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದವು.




