ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ರಾಯಚೂರು ಗಡಿಯಿಂದ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿಲೋ ಮೀಟರ್ ವರೆಗೆ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಲಾಯಿತು. ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ರಾಜ್ಯ ಸರ್ಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ(international democracy day) ದಿನಾಚರಣೆ ಹಿನ್ನಲೆಯಲ್ಲಿ ಬೀದರನಿಂದ ಚಾಮರಾಜನಗರವರೆಗೂ ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈ ಕೈ ಹಿಡಿದು ರಾಜ್ಯದುದ್ದಕ್ಕೂ ವಿಶ್ವದ ಬೃಹತ್ ಮಾನವ ಸರಪಳಿ ರಚನೆ ಹಿನ್ನಲೆಯಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮಲ್ಲಿ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ವಿವಿಧೆತೆಯಲ್ಲಿ ಏಕತೆ ತೋರುವ ಹೆಮ್ಮೆಯ ರಾಷ್ಟ್ರ. ಭಾರತವು ಅತ್ಯಂತ ಯಶಸ್ವಿನ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ಸಂವಿಧಾನ ಪ್ರತಿಯೊಬ್ಬರಿಗೆ ಸಮಾನ ಅವಕಾಶ ನೀಡಿದ್ದು, ಸಂವಿಧಾನದ ಆಶಯದಂತೆ ಎಲ್ಲರೂ ನಡೆಯೋಣ ಎಂದರು.
ವಿಜಯಪುರ ಜಿಲ್ಲೆ ಐತಿಹಾಸಿಕ ಹಿನ್ನಲೆಯುಳ್ಳ ಜಿಲ್ಲೆಯಾಗಿದೆ. ದೇಶದ ಅಭಿವೃದ್ದಿಗೆ ಹಲವು ಕೊಡುಗೆ ನೀಡಿದ್ದು, ನಾವೆಲ್ಲರೂ ಸಂವಿಧಾನದ ಆಶಯಕ್ಕನುಗುಣವಾಗಿ ನಡೆದುಕೊಳ್ಳುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಸಾಕಾರಗೊಳಿಸೋಣ. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ವಿನೂತನ ಪ್ರಯತ್ನ ಮಾಡಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ ಹಾಗೂ ಸಾಮಾನ್ಯ ನಾಗರಿಕರಿಂದ ವಿವಿಧ ಕ್ಷೇತ್ರಗಳಲ್ಲಿ ಸಸಿ ನೆಡುವುದರೊಂದಿಗೆ ಆಯಾ ಕ್ಷೇತ್ರಗಳನ್ನು ಅರ್ಪಣೆ ಮಾಡುವ ಮೂಲಕ ಜಿಲ್ಲೆಯಾದ್ಯಂತ ಪ್ರಜಾಪ್ರಭುತ್ವ ವನ ನಿರ್ಮಾಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲೆಯಲ್ಲಿ ಸುಮಾರು 30 ಸಾವಿರ ಸಸಿಗಳನ್ನು ನೆಡುವ ಮೂಲಕ ವನ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಕ್ರಮದ ಸ್ಥಳದಲ್ಲಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು. ನಾಡಗೀತೆಯನ್ನು ಹಾಡಲಾಯಿತು. ಮಾನವ ಸರಪಳಿಯಲ್ಲಿ ಪಾಲ್ಗೊಂಡವರು, ಕೈ ಕೈ ಹಿಡಿದು ಜೈ ಹಿಂದ, ಜೈ ಕರ್ನಾಟಕ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಕವಿತಾ ಎಂ.ಬಡಿಗೇರ, ಉಪಾಧ್ಯಕ್ಷೆ ಸಿದ್ದಮ್ಮ ವಾಲೀಕಾರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಡಯಟ್ ಪ್ರಾಚಾರ್ಯ ಉಮಾದೇವಿ ಸೊನ್ನದ, ಆಲಮಟ್ಟಿ ಡ್ಯಾಂ ಅಧೀಕ್ಷಕ ಅಭಿಯಂತರ ಹಿರೇಗೌಡರ, ಗೋವಿಂದ ರಾಠೋಡ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ-ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.