ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕರ್ನಾಟಕದಲ್ಲಿನ ರಾಜಕೀಯ ಜಿದ್ದಾಜಿದ್ದಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮುಡಾ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ, ಜೆಡಿಎಸ್(BJP JDS) ಆಗ್ರಹಿಸುತ್ತಿವೆ. ಆಡಳಿತರೂಢ ಕಾಂಗ್ರೆಸ್(Congress) ಸಹ ತಿರುಗೇಟು ನೀಡುತ್ತಲೇ ಇದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹೈಕಮಾಂಡ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯನವರ ಬೆನ್ನಿಗೆ ಹೈಕಮಾಂಡ್ ನಿಂತಿದೆ. ಕಾನೂನಾತ್ಮಕ ಹೋರಾಟದ ರೂಪರೇಷೆ, ಮಾರ್ಗಗಳ ಕುರಿತು ಚರ್ಚಿಸಲಾಗಿದೆ.
ಸಭೆಯಲ್ಲಿ ಕಾನೂನು ಹೋರಾಟದ ಜೊತೆಗೆ ರಾಷ್ಟ್ರ ಮಟ್ಟದಲ್ಲಿ ಹಿಂದುಳಿದ ವರ್ಗದ ನಾಕಯತ್ವದ ಅಸ್ತ್ರ ಪ್ರಯೋಗಿಸಲು ಸಜ್ಜಾಗುತ್ತಿದೆ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಲ್ಲಿ ಈ ರೀತಿಯಾಗಿ ಸಂವಿಧಾನದ ವಿರುದ್ಧ ಕೆಲಸ ಮಾಡುವ ಮೂಲಕ ಬಹುಮತವಿರುವ ಸರ್ಕಾರಗಳನ್ನು ಅಸ್ಥಿರಗೊಳಿಸುವ ಹುನ್ನಾರ ಕೇಂದ್ರದ ಬಿಜೆಪಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಲಾಗಿದೆ. ಸಿದ್ದರಾಮಯ್ಯ ಅಹಿಂದ ನಾಯಕರಾಗಿದ್ದಾರೆ. ಹಿಂದುಳಿದ ವರ್ಗದ ನಾಯಕ 2ನೇ ಬಾರಿಗೆ ಸಿಎಂ ಆಗಿರುವುದನ್ನು ಸಹಿಸಿಕೊಳ್ಳದೆ ಈ ರೀತಿ ಮಾಡಲಾಗುತ್ತಿದೆ ಎಂದು ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸಲು ಸಹ ಚಿಂತನೆ ನಡೆದಿದೆಯಂತೆ.
ರಾಜ್ಯಪಾಲರನ್ನು ಕೈಗೊಂಬೆಯಾಗಿ ಮಾಡಿಕೊಂಡು ದಾಳಿ ನಡೆಸಲಾಗುತ್ತಿದೆ. ನಾವೆಲ್ಲ ಒಟ್ಟಾಗಿ ನಿಲ್ಲುತ್ತೇವೆ. ಈ ಬಗ್ಗೆ ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್(Rahul Gandhi) ಗಾಂಧಿ ಅವರಿಗೆ ತಿಳಿಸಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ್ ಹೇಳಿದ್ದಾರೆ. ಕರ್ನಾಟಕದಲ್ಲಿ ಗ್ಯಾರೆಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದಿದ್ದಾರೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸಹ ಹಾಜರಿದ್ದರು.