ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಕೊಟ್ಟ ಮಾತು ಉಳಿಸಿಕೊಳ್ಳುವುದು ಜಗತ್ತಿನಲ್ಲಿ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ, ನಾನಾಗಲಿ, ಬೇರೆ ಯಾರೇ ಆಗಲಿ ಎಲ್ಲರೂ ನುಡಿದಂತೆ ನಡೆಯಬೇಕು. ಕೊಟ್ಟ ಮಾತು ಉಳಿಸಿಕೊಳ್ಳಬೇಕು ಅನ್ನೋ ಸಾಲುಗಳನ್ನು ಹೊಂದಿರುವ ಇಂಗ್ಲಿಷ್ ಬರಹವೊಂದನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಸಧ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಹೈಕಮಾಂಡ್ ಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದರು.
ಸಿದ್ದರಾಮಯ್ಯನವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಅವರ ವಿರುದ್ಧ ದೂರುಗಳಿಲ್ಲ. ಆದರೂ ಕೆಲವರು ಮತ್ತೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೇಳಿದ್ದಾರೆ. ಆದರೆ, ಸಧ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ ಅಂತಾ ಹೇಳಿದರು. ನಿರ್ಮಲಾನಂದ ಸ್ವಾಮೀಜಿ ಡಿ.ಕೆ ಶಿವಕುಮಾರ್ ಅವರ ಪರವಾಗಿ ಮಾತನಾಡಿದ್ದಾರೆ ಅನ್ನೋ ಪ್ರಶ್ನೆಗೆ, ಸಿಎಂ ಆಗಬೇಕಾದವರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.




